ಬಳ್ಳಾರಿ ನಗರದಲ್ಲಿ ಕಳೆದ ಮೂರು ತಿಂಗಳಲ್ಲಿ 35 ರಸ್ತೆ ಅಪಘಾತಗಳು ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. ಕೇವಲ ಮೂರು ದಿನಗಳ ಅಂತರದಲ್ಲಿ ಇಬ್ಬರು ಯುವಕರು ಲಾರಿ ಅಪಘಾತದಲ್ಲಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ, ನಗರದಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಕಟ್ಟುನಿಟ್ಟಿನ ನಿಷೇಧ ಹೇರಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಬಳ್ಳಾರಿ, ನವೆಂಬರ್ 4: ಗಣಿನಾಡು ಬಳ್ಳಾರಿ ನಗರದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ನಗರದೊಳಗೆ ಭಾರೀ ಗಾತ್ರದ ವಾಹನಗಳು ಹಾಗೂ ಲಾರಿಗಳ ಸಂಚಾರ ಹೆಚ್ಚಾಗುತ್ತಿರುವುದರಿಂದ ಅಪಘಾತಗಳು ಸಂಭವಿಸುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಮೂರು ತಿಂಗಳ ಅವಧಿಯಲ್ಲಿ 35 ರಸ್ತೆ ಅಪಘಾತಗಳು ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ.